ಕರ್ನಾಟಕ ಅನ್ ಲಾಕ್; ನಾಳೆಯಿಂದಲೇ ರಾಜ್ಯದ ವಿವಿಧ ಭಾಗಗಳಿಂದ ಮಹಾರಾಷ್ಟ್ರಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪುನರಾರಂಭ..
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಲಾಕ್ಡೌನ್ ಘೋಷಿಸಿತ್ತು. ಪರಿಣಾಮ ರಾಜ್ಯದಲ್ಲಿ ಕೊರೊನಾ ಸೊಂಕಿನ ಪ್ರಮಾಣ ಇಳಿಮುಖವಾಗಿದೆ. ಇದರಿಂದ ರಾಜ್ಯ ಈಗ ಅನ್ಲಾಕ್ ಆಗ್ತಿದೆ. ಕೊರೊನಾ ಲಾಕ್ಡೌನ್ ನಲ್ಲಿ ಸ್ಥಗಿತಗೊಂಡಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸಂಚಾರ ಹಂತಹಂತವಾಗಿ ಆರಂಭಗೊಂಡಿದೆ.
ಹೀಗಾಗಿ ನಾಳೆಯಿಂದ ಮಹಾರಾಷ್ಟ್ರಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಬೆಂಗಳೂರು, ಶಿವಮೊಗ್ಗ ಹಾಗೂ ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ನಾಳೆಯಿಂದಲೇ ಪ್ರಾರಂಭವಾಗಲಿದೆ ಎಂದು ಕೆಎಸ್ಆರ್ಟಿಸಿ ಪತ್ರಿಕಾ ಪ್ರಕಟನೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ರಾಜ್ಯದ ವಿವಿಧ ಭಾಗಗಳಿಂದ ಮಹಾರಾಷ್ಟ್ರದ ಮುಂಬೈ, ಪುಣೆ, ಮೀರಜ್, ಸೊಲ್ಲಾಪುರ, ಪಂಡರಾಪುರ ಮತ್ತು ತುಳಜಾಪುರಕ್ಕೆ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಸಾರಿಗೆ ಬಸ್ ಗಳ ಕಾರ್ಯಾಚರಣೆ ಪುರನರಾರಂಭಿಸಲಾಗುತ್ತಿದೆ ಎಂದು ತಿಳಿಸಿದೆ.
ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ನಿಗಮವು ಅಂತರ ರಾಜ್ಯ ಸಾರಿಗೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುತ್ತದೆ. ಪ್ರಸ್ತುತ ಕೋವಿಡ್ ಲಾಕ್ ಡೌನ್ ಸಡಿಲಗೊಂಡಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 25/06/2021ರಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಸಾರಿಗೆ ಸಂಚಾರ ಆರಂಭಿಸಲಾಗುತ್ತಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.