ಬಿಜೆಪಿ ವಿಧಾನಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ ನೀಡುವ ಮೂಲಕ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಕುತೂಹಲ ಘಟ್ಟ ತಲುಪಿದೆ.
ಚನ್ನಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಸ್ಪರ್ಧಿಸಲು ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೆ. ಜೆಡಿಎಸ್ ನಿಂದ ಸ್ಪರ್ಧಿಸಿದರೆ ಗೆಲುವು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು.
ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದ ಬೆನ್ನಲ್ಲೇ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದ್ದು, ಸ್ಪೀಕರ್ ಭೇಟಿ ಮಾಡಿ ಸೋಮವಾರವೇ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.
ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹಿಂದೆ ಸರಿದ ಕಾರಣ ಸಿಪಿ ಯೋಗೇಶ್ವರ್ ಗೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ಆಹ್ವಾನ ನೀಡಲಾಗಿತ್ತು. ಆದರೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಯೋಗೇಶ್ವರ್ ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಯೋಗೇಶ್ವರ್ ಬಿಜೆಪಿ ತೊರೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಲು ಸಿಪಿ ಯೋಗೇಶ್ವರ್ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಯೋಗೇಶ್ವರ್ ಗೆ ಆಹ್ವಾನ ನೀಡಿದೆ ಎಂದು ಹೇಳಲಾಗಿದೆ.
ಚನ್ನಪಟ್ಟಣದಿಂದ ಸ್ಪರ್ಧಿಸಿದ್ದ ಎಚ್.ಡಿ. ಕುಮಾರಸ್ವಾಮಿ ಲೋಕಸಭೆಯಲ್ಲಿ ಜಯ ಸಾಧಿಸಿ ಕೇಂದ್ರ ಸಚಿವರಾಗಿರುವುದರಿಂದ ಈ ಕ್ಷೇತ್ರವನ್ನು ಉಳಿಸಿಕೊಳ್ಳುವ ಒತ್ತಡದಲ್ಲಿದ್ದಾರೆ. ಸತತ ಸೋಲುಂಡಿರುವ ಪುತ್ರ ನಿಖಿಲ್ ಕುಮಾರಸ್ವಾಮಿ ಈ ಕ್ಷೇತ್ರ ಕೈ ಬಿಟ್ಟು ಹೋಗಬಾರದು ಎಂಬ ಕಾರಣಕ್ಕೆ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದಾರೆ.
ಚನ್ನಪಟ್ಟಣದಲ್ಲಿ ಜೆಡಿಎಸ್ ಗೆ ಸೂಕ್ತ ಅಭ್ಯರ್ಥಿ ಇಲ್ಲದ ಕಾರಣ ಸಿಪಿ ಯೋಗೇಶ್ವರ್ ಅವರನ್ನೇ ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಆಹ್ವಾನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಎಚ್.ಡಿ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮುಖಂಡರ ಸಭೆಯನ್ನು ಮತ್ತೊಮ್ಮೆ ಕರೆದಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳವ ಸಾಧ್ಯತೆ ಇದೆ. ಒಂದು ವೇಳೆ ಟಿಕೆಟ್ ನೀಡಿದರೆ ಮಂಗಳವಾರ ಅಥವಾ ಬುಧವಾರ ನಾಮಪತ್ರ ಸಲ್ಲಿಸಲು ಯೋಗೇಶ್ವರ್ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.